ದೇವರನಾಮ: ಆರು ಬಾಳಿದರೇನು ಆರು ಬದುಕಿದರೇನು
ಸ್ರೀ ಕನಕ ದಾಸ
ರಾಗ: ಮೋಹನ
ತಾಳ: ಆಟ
ಆರು ಬಾಳಿದರೇನು ಆರು ಬದುಕಿದರೇನು
ನಾರಯಣನ ಸ್ಮರಣೆ ನಮಗಿಲ್ಲದನಕ ||ಪ||
ಉಣ್ಣಬರದವರಲ್ಲಿ ಊರೂಟವಾದರೆ ಏನು
ಹಣ್ಣು ಬಿಡದ ಮರಗಳು ಹಾಳಾದರೇನು
ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು
ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು? ||೧||
ಅಕ್ಕರಿಲ್ಲದವರಿಗೆ ಮಕ್ಕಳಿದ್ದು ಫಲವೇನು
ಹೊಕ್ಕು ನಡೆಯದ ನಂಟತನದೊಳೇನು
ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು
ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು? ||೨||
ಅಲ್ಪದೊರೆಗಳ ಜೀತ ಎಷ್ತು ಮಾಡಿದರೇನು
ಬಲ್ಪಂಥವಿಲ್ಲದವನ ಬಾಳ್ವೆಯೇನು
ಕಲ್ಪಕಲ್ಪಿತ ಕಾಗಿನೆಲೆಯಾದಿ ಕೇಶವನ
ಸ್ವಲ್ಪವೂ ನೆನೆಯದ ನರನಿದ್ದರೇನು? ||೩||